ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಮಾಣ ಕ್ಷೇತ್ರದ ಬಹುದೊಡ್ಡ ಸಮಸ್ಯೆಗಳಾದ ಕೆಂಪು ಕಲ್ಲು ಮತ್ತು ಮರಳುಗಾರಿಕೆಯ ಕೊರತೆಯನ್ನು ಬಹುತೇಕ ಪರಿಹರಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಮರಳು ಅಭಾವ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ, ಈಗಾಗಲೇ 19 ಮರಳು ಬ್ಲಾಕ್ಗಳಲ್ಲಿ ಗಣಿಗಾರಿಕೆ ನಡೆಯುತ್ತಿದ್ದು, ಇನ್ನೂ 42 ಹೊಸ ಮರಳು ಬ್ಲಾಕ್ಗಳನ್ನು ಗುರುತಿಸಲಾಗಿದೆ. ಈ 42 ಬ್ಲಾಕ್ಗಳಲ್ಲಿ ಮರಳುಗಾರಿಕೆ ನಡೆಸಲು ಮಾರ್ಚ್ ತಿಂಗಳೊಳಗೆ ಪರವಾನಿಗೆ ನೀಡಲಾಗುವುದು. ಈ ಯೋಜನೆಗಳ ಮೂಲಕ ಮುಂದಿನ ಐದು ವರ್ಷಗಳ ಕಾಲ ಜಿಲ್ಲೆಯಲ್ಲಿ ಮರಳು ಸಮಸ್ಯೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.
ಅದೇ ರೀತಿ, ಕೆಂಪು ಕಲ್ಲು ಗಣಿಗಾರಿಕೆಯ ಸಮಸ್ಯೆಗೂ ಪರಿಹಾರ ಸಿಕ್ಕಿದೆ. ಹಿಂದೆ ₹30-35ರಷ್ಟಿದ್ದ ಕಲ್ಲಿನ ದರವು ₹65ಕ್ಕೆ ಏರಿಕೆಯಾಗಿತ್ತು. ಈಗ ಈ ಸಮಸ್ಯೆ ಬಗೆಹರಿಸಿ, ಕೆಂಪು ಕಲ್ಲು ತೆಗೆಯಲು ಇದುವರೆಗೆ 59 ಪರ್ಮಿಟ್ಗಳನ್ನು ವಿತರಿಸಲಾಗಿದೆ. ಇದರಿಂದಾಗಿ ಸದ್ಯ ಕಲ್ಲಿನ ದರವು ₹45ಕ್ಕೆ ಇಳಿಕೆಯಾಗಿದ್ದು, ಅದನ್ನು ₹40ಕ್ಕಿಂತ ಕಡಿಮೆ ಇಳಿಸುವ ಉದ್ದೇಶ ಇದೆ ಎಂದು ತಿಳಿಸಿದರು. ಇನ್ನೂ 12 ಅರ್ಜಿಗಳು ಬಾಕಿ ಉಳಿದಿದ್ದು, ಅವುಗಳನ್ನು ಶೀಘ್ರ ವಿಲೇವಾರಿ ಮಾಡಲಾಗುವುದು. ಕೆಂಪುಕಲ್ಲು ಗಣಿಗಾರಿಕೆಗೆ ಮತ್ತಷ್ಟು ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದರು.
ಜಿಲ್ಲೆಯಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿಗಳಿಗಾಗಿ ರಸ್ತೆಗಳನ್ನು ಗುರುತಿಸಲಾಗಿದ್ದು, ಮೊದಲ ಹಂತದಲ್ಲಿ ₹7 ಕೋಟಿ ಮೊತ್ತದ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ನೂತನ ಜಿಲ್ಲಾಧಿಕಾರಿ ಕಚೇರಿ ಪಡೀಲ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ, ಸಾರ್ವಜನಿಕರ ಅನುಕೂಲಕ್ಕಾಗಿ ವಾರದಲ್ಲಿ ಒಂದು ದಿನ ಹಳೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದರು. ಹಳೆ ಕಚೇರಿ ಆವರಣದಲ್ಲಿ ಎಸ್ಎಎಫ್ ಪಡೆ ಕಚೇರಿಗೆ ಮತ್ತು ಉಳಿದ ಸ್ಥಳವನ್ನು ರಾಷ್ಟ್ರೀಯ ಹೆದ್ದಾರಿ ಹಾಗೂ ಕಾರ್ಮಿಕ ಇಲಾಖೆಗೆ ಹಂಚಿಕೆ ಮಾಡುವ ಕುರಿತು ಪರಿಶೀಲಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ನರ್ವಾಡೆ ವಿನಾಯಕ ಕರ್ಬಾರಿ ಮತ್ತು ಅಪರ ಜಿಲ್ಲಾಧಿಕಾರಿ ರಾಜು ಕೆ. ಉಪಸ್ಥಿತರಿದ್ದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









