ಮಂಗಳೂರು : ಪಟ್ಟಣ ಪಂಚಾಯತ್ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಬಜಪೆ ಮತ್ತು ಕಿನ್ನಿಗೋಳಿ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಈ ಭಾಗದ ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಸೌಭಾಗ್ಯ ನಮಗೆ ಲಭಿಸಿದೆ. ವಿಶೇಷವಾಗಿ ಅಲ್ಪಸಂಖ್ಯಾತ ಮತದಾರರು ಈ ಬಾರಿ ಬಿಜೆಪಿಯ ಕೈಹಿಡಿದಿರುವುದು ಗಮನಾರ್ಹ ಬೆಳವಣಿಗೆಯಾಗಿದ್ದು, ಕಾಂಗ್ರೆಸ್ ಆಡಳಿತದ ಬಗ್ಗೆ ಜನರಿಗಿರುವ ಅಸಮಾಧಾನವನ್ನು ಇದು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದ್ದಾರೆ.
ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಈ ಭಾಗದಲ್ಲಿ, ಪ್ರಸ್ತುತ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಸಹ ಮತದಾರರು ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಕಾಂಗ್ರೆಸ್ ಜಿಲ್ಲೆಗೆ ನೀಡಿದ ‘ಅಭಿವೃದ್ಧಿ’ ಎಂತಹುದು ಎಂಬುದಕ್ಕೆ ಈ ಭಾಗದ ಮತದಾರರು ಚುನಾವಣೆಯ ಮೂಲಕ ಸರ್ಕಾರಕ್ಕೆ ತಕ್ಕ ಉತ್ತರ ನೀಡಿದ್ದಾರೆ. ಬಜಪೆಯಲ್ಲಿ ನಡೆದ ಕೆಲವೊಂದು ಅಹಿತಕರ ಘಟನೆಗಳನ್ನು ರಾಜ್ಯ ಸರ್ಕಾರ ನಿರ್ವಹಿಸಿದ ರೀತಿ ಮತ್ತು ಕಾನೂನು ಸುವ್ಯವಸ್ಥೆಯ ವೈಫಲ್ಯವನ್ನು ಮತದಾರರು ಸೂಕ್ಷ್ಮವಾಗಿ ಗಮನಿಸಿದ್ದು, ಬದಲಾವಣೆಗಾಗಿ ಬಿಜೆಪಿಯನ್ನು ಆರಿಸಿದ್ದಾರೆ ಎಂದು ಕುಂಪಲ ವಿಶ್ಲೇಷಿಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕರ್ನಾಟಕದಲ್ಲಿ ಸದ್ಯ ಕೇವಲ ‘ಕುರ್ಚಿ ಉಳಿಸುವ’ ರಾಜಕಾರಣ ನಡೆಯುತ್ತಿದೆಯೇ ಹೊರತು ಯಾವುದೇ ನೈಜ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಸರ್ಕಾರ ಜಾತಿ ಗಣತಿ ಸರ್ವೆ ಮಾಡುವ ಬದಲು, ರಸ್ತೆಗಳಲ್ಲಿನ ಗುಂಡಿಗಳ ಗಣತಿ ಮಾಡಿದರೆ ಜನರಿಗೆ ಹೆಚ್ಚು ಅನುಕೂಲವಾಗುತ್ತಿತ್ತು ಎಂದು ವ್ಯಂಗ್ಯವಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಈಗ ಅನುದಾನದ ಕೊರತೆ ಎದುರಿಸುತ್ತಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು 5 ಸಾವಿರ ಕೋಟಿ ರೂಪಾಯಿಗಳ ಬಾಕಿ ಇರುವ ಬಗ್ಗೆ ಅಧಿವೇಶನದಲ್ಲಿ ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









