
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ವಿಕೃತವಾಗಿ ‘ಶ್ರದ್ಧಾಂಜಲಿ’ ಪೋಸ್ಟ್ ಹಂಚಿಕೊಂಡಿರುವ ಘಟನೆ ಜಿಲ್ಲಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಅವರು, ಇದೊಂದು ವಿಕೃತ ಮನಸ್ಥಿತಿಯ ಪರಮಾವಧಿ ಎಂದು ಘಟನೆಯನ್ನು ಕಟುವಾಗಿ ಖಂಡಿಸಿದ್ದಾರೆ. ಒಬ್ಬ ಮಹಿಳಾ ಜನಪ್ರತಿನಿಧಿಯ ಬಗ್ಗೆ ಇಂತಹ ಕೀಳುಮಟ್ಟದ ನಡೆ ಪ್ರದರ್ಶಿಸಿರುವುದು ಸಮಾಜ ತಲೆತಗ್ಗಿಸುವ ವಿಷಯವಾಗಿದೆ ಎಂದು ಅವರು ಕಿಡಿಕಾರಿದ್ದಾರೆ.
ಪರಿಶಿಷ್ಟ ಜಾತಿಗೆ ಸೇರಿದ ಒಬ್ಬ ಗೌರವಾನ್ವಿತ ಮಹಿಳಾ ಶಾಸಕಿಯ ವಿರುದ್ಧ ಈ ರೀತಿಯ ಅವಮಾನ ನಡೆದಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರವಾಗಿದೆ. ಪ್ರತಿ ಬಾರಿಯೂ ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು, ಸಂವಿಧಾನದ ಅಡಿಯಲ್ಲಿ ಆಯ್ಕೆಯಾದ ಒಬ್ಬ ಮಹಿಳಾ ಪ್ರತಿನಿಧಿಗೆ ಇಂತಹ ಅನ್ಯಾಯವಾದಾಗ ಮೌನಕ್ಕೆ ಶರಣಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಾಮತ್ ಆಕ್ರೋಶ ಹೊರಹಾಕಿದ್ದಾರೆ. ಈ ಘಟನೆಯನ್ನು ಖಂಡಿಸಲು ಕಾಂಗ್ರೆಸ್ ವಿಫಲವಾಗಿದೆ ಮತ್ತು ಯಾವುದೇ ಕ್ರಮ ಕೈಗೊಳ್ಳಲು ಹಿಂಜರಿಯುತ್ತಿದೆ ಎಂದು ಅವರು ಆರೋಪಿಸಿದ್ದು, ಈ ಅನ್ಯಾಯದ ವಿರುದ್ಧ ನಾಳೆ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ‘ಬಿಲ್ಲವ ಸಂದೇಶ್’ ಎಂಬ ಫೇಸ್ಬುಕ್ ಖಾತೆಯಿಂದ ಸಂದೇಶ್ ಎಂಬಾತ ಈ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿದ್ದು, ಆತನನ್ನು ಕೂಡಲೇ ಬಂಧಿಸಬೇಕೆಂದು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ (SP) ದೂರು ನೀಡಿದ್ದಾರೆ. ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ತಪ್ಪಿತಸ್ಥನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









