ಮಂಗಳೂರು : ನಗರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರನ್ನು ಬಟ್ಟಪ್ಪಾಡಿ ನಿವಾಸಿ ಮುಹಮ್ಮದ್ ಮಹಾಝ್ (24) ಎಂದು ಗುರುತಿಸಲಾಗಿದೆ. ಕ್ಯಾಟರಿಂಗ್ ಕೆಲಸ ಮುಗಿಸಿಕೊಂಡು ತಮ್ಮ ಮನೆಗೆ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಜನವರಿ 5ರಂದು ರಾತ್ರಿ ಕೆಲಸ ಮುಗಿಸಿ ಮಹಾಝ್ ಅವರು ತಮ್ಮ ಸ್ಕೂಟರ್ನಲ್ಲಿ ತೆರಳುತ್ತಿದ್ದಾಗ, ಬೀರಿ ಸಮೀಪ ತಲಪಾಡಿ ಕಡೆಗೆ ಸಂಚರಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ರಸ್ತೆಗೆ ಎಸೆಯಲ್ಪಟ್ಟ ಮಹಾಝ್ ಅವರಿಗೆ ತಲೆ ಮತ್ತು ದೇಹದ ಇತರೆ ಭಾಗಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು. ತಕ್ಷಣವೇ ಅವರನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಸುಮಾರು ನಾಲ್ಕು ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಡಿದ ಅವರು, ಜನವರಿ 9ರ ತಡರಾತ್ರಿ ಮೃತಪಟ್ಟಿದ್ದಾರೆ. ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಸುದ್ದಿಗಳು, ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು









