ಮಂಗಳೂರು : ಮಂಗಳೂರಿನಲ್ಲಿ ಮಂಗಳವಾರ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಈ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು. ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವುದು ಈ ಮಾಸಾಚರಣೆಯ ಪ್ರಮುಖ ಉದ್ದೇಶವಾಗಿತ್ತು.
ಈ ಅಂಗವಾಗಿ ನಗರದ ಪುರಭವನದಿಂದ ಸ್ಟೇಟ್ ಬ್ಯಾಂಕ್ ವರೆಗೆ ಬೃಹತ್ ರಸ್ತೆ ಸುರಕ್ಷತಾ ಜಾಥಾವನ್ನು ಆಯೋಜಿಸಲಾಗಿತ್ತು. ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ಜೈಬುನ್ನೀಸಾ ಅವರು ಜಾಥಾಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿ ಸುರಕ್ಷಿತ ಸಂಚಾರದ ಅಗತ್ಯತೆಯನ್ನು ಪ್ರತಿಪಾದಿಸಿದರು.
ಕಾರ್ಯಕ್ರಮದ ಸಂದರ್ಭದಲ್ಲಿ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಮುರಗೇಂದ್ರ ಬಸವರಾಜ ಶಿರೋಳಕರ, ಸಂಚಾರ ಪೊಲೀಸ್ ಉಪವಿಭಾಗದ ಸಹಾಯಕ ಆಯುಕ್ತೆ ನಜ್ಮಾ ಫಾರೂಖಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ನ್ಯಾಯವಾದಿ ಮಾನಸ ಹೆಗ್ಡೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು, ಸುರಕ್ಷಿತ ರಸ್ತೆ ಸಂಚಾರದ ನಿಯಮಗಳನ್ನು ಪಾಲಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಿದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









