ಉಡುಪಿ : ಮಣಿಪಾಲದ ದಶರಥನಗರದಲ್ಲಿ ಆಟೋ ರಿಕ್ಷಾ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ದಾವಣಗೆರೆ ಮೂಲದ ಮಂಜುನಾಥ್ ಕಾಮತ್ (45) ಮೃತಪಟ್ಟ ದುರ್ದೈವಿ. ಇವರು ಕಳೆದ ಕೆಲವು ದಿನಗಳಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರು ಎನ್ನಲಾಗಿದ್ದು, ದಶರಥನಗರದ ಅಂಗಡಿಯೊಂದರ ಕೊಠಡಿಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ.
ಈ ಘಟನೆಯು ಸುಮಾರು ನಾಲ್ಕು ದಿನಗಳ ಹಿಂದೆಯೇ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತದೇಹವು ಸಂಪೂರ್ಣವಾಗಿ ಕೊಳೆತು ಹೋಗಿದ್ದು, ಕೊಠಡಿಯಿಂದ ತೀವ್ರವಾದ ದುರ್ವಾಸನೆ ಬರಲಾರಂಭಿಸಿದಾಗ ಸ್ಥಳೀಯ ಸಾರ್ವಜನಿಕರಿಗೆ ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಮಣಿಪಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಆತ್ಮಹತ್ಯೆಯ ಪ್ರಕರಣ ಬೆಳಕಿಗೆ ಬಂದಿದೆ.
ಮಣಿಪಾಲ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ವಾಮನ ಮತ್ತು ಅಧಿಕಾರಿ ಶ್ರವಣ್ ಅವರು ಕಾನೂನು ಪ್ರಕ್ರಿಯೆಗಳನ್ನು ನಡೆಸಿದ್ದಾರೆ. ಸ್ಥಳಕ್ಕೆ ವಿಧಿವಿಜ್ಞಾನ ತಜ್ಞರು (FSL) ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮಣಿಪಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









