ಮಡಿಕೇರಿ : ತಾಲೂಕಿನ ಗಡಿಭಾಗದ ಬೆಟ್ಟತ್ತೂರು ಗ್ರಾಮದಲ್ಲಿ ಫೆಬ್ರವರಿ 28ರಂದು ಸಂಜೆ ಸಂಭವಿಸಿದ ಕಾಡಾನೆ ದಾಳಿಗೆ 17 ವರ್ಷದ ವಿದ್ಯಾರ್ಥಿನಿ ಪೂಜಾ ಎಂಬಾಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಟ್ಟತ್ತೂರು ನಿವಾಸಿ ಗಿರೀಶ್ ಎಂಬುವವರ ಪುತ್ರಿಯಾದ ಈಕೆ, ಮಡಿಕೇರಿಯ ಸಂತ ಜೋಸೆಫ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಸಂಜೆ 5:30ರ ಸುಮಾರಿಗೆ ಕಾಲೇಜಿನಿಂದ ಬಸ್ನಲ್ಲಿ ಬಂದು ಮನೆಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಹಠಾತ್ತನೆ ಎದುರಾದ ಕಾಡಾನೆ ಬಾಲಕಿಯ ಮೇಲೆ ದಾಳಿ ನಡೆಸಿದೆ. ತೀವ್ರವಾಗಿ ಗಾಯಗೊಂಡ ಪೂಜಾ ಘಟನಾ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಭೀಕರ ದುರ್ಘಟನೆಯಿಂದಾಗಿ ಬೆಟ್ಟತ್ತೂರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಅರಣ್ಯ ಇಲಾಖೆ ಹಾಗೂ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಭಾಗದಲ್ಲಿ ಕಾಡಾನೆಗಳ ಹಾವಳಿ ವಿಪರೀತವಾಗಿದ್ದು, ಈ ಹಿಂದೆಯೂ ಅನೇಕ ಜೀವಗಳು ಬಲಿಯಾಗಿದ್ದರೂ ಇಲಾಖೆ ಯಾವುದೇ ಕಟ್ಟುನಿಟ್ಟಿನ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಪದೇ ಪದೇ ದೂರು ನೀಡಿದರೂ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯೇ ಇಂದಿನ ಈ ಅಮಾಯಕ ಬಾಲಕಿಯ ಸಾವಿಗೆ ಕಾರಣವೆಂದು ಕಣ್ಣೀರು ಹಾಕುತ್ತಿರುವ ಗ್ರಾಮಸ್ಥರು, ಅರಣ್ಯ ಇಲಾಖೆಯ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









