ಮಂಗಳೂರು : ಉಳ್ಳಾಲದ ಮಸೀದಿಯೊಂದರ ಬಳಿ ಬಾಂಬ್ ಸ್ಫೋಟಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಕಮೆಂಟ್ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಇನ್ಸ್ಟಾಗ್ರಾಂನ ‘ಶಂಕರ್11916’ ಎಂಬ ಖಾತೆಯ ಮೂಲಕ “ಸಪೋರ್ಟ್ ಮಾಡಿ ದ್ರೋ ಉಳ್ಳಾಲ ಮಸ್ಟಿದ್ ಹತ್ರ ಬಾಂಬ್ ಬ್ಲಾಸ್ಟ್ ಮಾಡ್ತೀನಿ” ಎಂಬ ವಿಚ್ಛಿದ್ರಕಾರಕ ಸಂದೇಶವನ್ನು ಹರಿಬಿಡಲಾಗಿತ್ತು. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿತ್ತು, ಈ ಹಿನ್ನೆಲೆಯಲ್ಲಿ ಮಾರ್ಚ್ 2ರ ಸೋಮವಾರದಂದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ನಡೆಸಿ, ಮಾರ್ಚ್ 3ರ ಮಂಗಳವಾರದಂದು ಆರೋಪಿಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಿವಾಸಿ ಶಂಕರ್ ಮಸ್ತಪ್ಪ ಮೊಗೆರ್ (35 ವರ್ಷ) ಎಂದು ಗುರುತಿಸಲಾಗಿದೆ. ಬಂಧನದ ವೇಳೆ ಕೃತ್ಯಕ್ಕೆ ಬಳಸಲಾಗಿದ್ದ ಮೊಬೈಲ್ ಫೋನನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸಮಾಜದಲ್ಲಿ ಕೋಮು ದ್ವೇಷ ಹರಡುವ ಮತ್ತು ಶಾಂತಿ ಭಂಗ ತರುವ ಇಂತಹ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಘಟನೆಯ ಬಗ್ಗೆ ಹೆಚ್ಚಿನ ತನಿಖೆ ಮುಂದುವರಿದಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









