ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಇತ್ತೀಚೆಗೆ ಭೇಟಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಸ್ಥಳೀಯ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯಾದ್ಯಂತ ಸುದ್ದಿಯಾಗಿದ್ದ ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಆಯೋಗದ ಗಮನಕ್ಕೆ ತರಲಾಗಿತ್ತು. ಈ ಕುರಿತು ಅಹವಾಲು ಆಲಿಸಲು ಅಧ್ಯಕ್ಷರು ಕಾಲೇಜಿಗೆ ಭೇಟಿ ನೀಡಬೇಕೆಂದು ಸಾರ್ವಜನಿಕರು ಹಾಗೂ ವಿದ್ಯಾರ್ಥಿ ಸಂಘಟನೆಗಳು ಮನವಿ ಸಲ್ಲಿಸಿದ್ದವು.
ಮನವಿಗೆ ಪೂರಕವಾಗಿ ಸ್ಪಂದಿಸಿದ್ದ ಡಾ. ನಾಗಲಕ್ಷ್ಮೀ ಚೌಧರಿ ಅವರು ಕಾಲೇಜಿಗೆ ಭೇಟಿ ನೀಡಲು ಸಿದ್ಧರಾಗಿದ್ದರು. ಆದರೆ, ಈ ವೇಳೆ ಮಧ್ಯಪ್ರವೇಶಿಸಿದ ಮಹಿಳಾ ಕಾಂಗ್ರೆಸ್ ಮುಖಂಡರು, ಅಧ್ಯಕ್ಷರನ್ನು ಕಾಲೇಜಿಗೆ ತೆರಳದಂತೆ ತಡೆದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. “ಕಾಲೇಜಿನಲ್ಲಿ ಎಲ್ಲವೂ ಸರಿಯಾಗಿದೆ, ಯಾವುದೇ ಸಮಸ್ಯೆಗಳಿಲ್ಲ” ಎಂದು ಮುಖಂಡರು ಅಧ್ಯಕ್ಷರ ದಾರಿ ತಪ್ಪಿಸಿದ ಕಾರಣ ಅವರು ತಮ್ಮ ಭೇಟಿಯನ್ನು ಅರ್ಧಕ್ಕೇ ಕೈಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಇದರಿಂದಾಗಿ ಕಾಲೇಜಿನ ಮೂಲಸೌಕರ್ಯ ಅಥವಾ ಇತರ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಆಯೋಗದ ಮುಂದೆ ನೇರವಾಗಿ ಅಳಲು ತೋಡಿಕೊಳ್ಳಲು ಕಾಯುತ್ತಿದ್ದ ವಿದ್ಯಾರ್ಥಿನಿಯರು ತೀವ್ರ ನಿರಾಸೆಗೊಂಡಿದ್ದಾರೆ. ಮಹಿಳಾ ಆಯೋಗದ ಅಧ್ಯಕ್ಷರೇ ಸ್ಥಳಕ್ಕೆ ಬಂದಿದ್ದರೂ, ರಾಜಕೀಯ ಕಾರಣಗಳಿಗಾಗಿ ವಿದ್ಯಾರ್ಥಿನಿಯರ ಸಂಕಷ್ಟವನ್ನು ಆಲಿಸದೆ ಮರಳಿದ್ದು ಈಗ ಪುತ್ತೂರಿನಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









