ಉಡುಪಿ: ಕಟಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎಲ್ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಒಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲೇ ಈ ಘಟನೆ ಸಂಭವಿಸಿದ್ದು, ಗ್ಯಾಸ್ ತುಂಬಿದ ಟ್ಯಾಂಕರ್ ರಸ್ತೆಗೆ ಉರುಳಿದ್ದರಿಂದ ಸ್ಥಳದಲ್ಲಿ ಕೆಲಕಾಲ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಅಪಘಾತದ ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕೂಡಲೇ ಸ್ಥಳಕ್ಕೆ ಧಾವಿಸಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಆರಂಭಿಸಿದರು. ಟ್ಯಾಂಕರ್ನಿಂದ ಗ್ಯಾಸ್ ಸೋರಿಕೆಯಾಗುತ್ತಿದೆಯೇ ಎಂದು ಕೂಲಂಕಷವಾಗಿ ಪರಿಶೀಲಿಸಿದ ಸಿಬ್ಬಂದಿಗಳು, ಮುನ್ನೆಚ್ಚರಿಕಾ ಕ್ರಮವಾಗಿ ಟ್ಯಾಂಕರ್ ಮೇಲೆ ನಿರಂತರವಾಗಿ ನೀರು ಹಾಯಿಸಿ ಸಂಭವನೀಯ ಅಗ್ನಿ ಅವಘಡವನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಅಪಘಾತದ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸ್ಥಳೀಯ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ವಾಹನಗಳನ್ನು ಪರ್ಯಾಯ ಮಾರ್ಗಗಳಲ್ಲಿ ಬಿಡುವ ಮೂಲಕ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಶ್ರಮಿಸಿದರು. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಮುನ್ನೆಚ್ಚರಿಕಾ ಕ್ರಮಗಳು ಮುಂದುವರಿದಿವೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









