ಮಂಗಳೂರು : ಪಂಪ್ವೆಲ್ ಹಾಗೂ ಎಕ್ಕೂರು ಪರಿಸರದಲ್ಲಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ನಿಷೇಧಿತ ಎಂಡಿಎಂಎ (MDMA) ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಮಂಗಳೂರು ಸಿಸಿಬಿ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಆಧಾರದ ಮೇಲೆ ಆದಿತ್ಯವಾರ ಕಾರ್ಯಾಚರಣೆ ನಡೆಸಿದ ಪೊಲೀಸರು, ಆಟೋ ರಿಕ್ಷಾದಲ್ಲಿ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ತಂಡವನ್ನು ರೆಡ್ ಹ್ಯಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಹೈದರ್ ಅಲಿ ಅಲಿಯಾಸ್ ಹೈದರ್, 29 ವರ್ಷದ ಮೊಹಮ್ಮದ್ ಸಜಾದ್ ಮತ್ತು 26 ವರ್ಷದ ಜೈಸನ್ ಮೆನೆಜಸ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಸುಮಾರು 2,50,000 ರೂಪಾಯಿ ಮೌಲ್ಯದ 26 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇದರೊಂದಿಗೆ ಮಾರಾಟಕ್ಕೆ ಬಳಸುತ್ತಿದ್ದ KA-19-AC-2245 ಸಂಖ್ಯೆಯ ಆಟೋ ರಿಕ್ಷಾ, 37,000 ರೂಪಾಯಿ ನಗದು ಹಣ, 5 ಮೊಬೈಲ್ ಫೋನ್ಗಳು ಮತ್ತು ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಮೌಲ್ಯ ಸುಮಾರು 4,37,500 ರೂಪಾಯಿ ಎಂದು ಅಂದಾಜಿಸಲಾಗಿದೆ.
ಈ ಜಾಲದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಹೈದರ್ ಅಲಿ ಈ ಹಿಂದೆ ಕೂಡ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ಈತನ ಮೇಲೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು 2024ರಲ್ಲಿ ಮಾದಕ ವಸ್ತು ಮಾರಾಟ ಮಾಡಿದ ಪ್ರಕರಣ ದಾಖಲಾಗಿತ್ತು. ಅಲ್ಲದೆ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪವೂ ಈತನ ಮೇಲಿದೆ. ಈ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಾಲದಲ್ಲಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









