ಮಂಗಳೂರು : ಬಂದರ್ ದಕ್ಕೆಯ ಮೀನು ವ್ಯಾಪಾರಿ ಹಾಗೂ ರೌಡಿಶೀಟರ್ ಆರೀಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಕಠಿಣವಾದ ‘ಕೆ-ಕೋಕಾ’ (ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ) ಜಾರಿಗೊಳಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಈ ಪ್ರಕರಣದ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ಮುಂದಿನ ವಿಚಾರಣೆಯನ್ನು ಮೈಸೂರಿನ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗಿದೆ.
ಈ ಕೊಲೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಒಟ್ಟು 15 ಆರೋಪಿಗಳು ಭಾಗಿಯಾಗಿರುವುದು ದೃಢಪಟ್ಟಿದೆ. ಈ ಪೈಕಿ ಈಗಾಗಲೇ 10 ಮಂದಿಯನ್ನು ಬಂಧಿಸಿ ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಸದ್ಯ ಅವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನುಳಿದ ಐವರು ಆರೋಪಿಗಳ ಪೈಕಿ ಕೆಲವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲು ಕಾನೂನು ಪ್ರಕ್ರಿಯೆಗಳನ್ನು ಚುರುಕುಗೊಳಿಸಲಾಗಿದೆ.
ಸಂಘಟಿತ ಅಪರಾಧಗಳನ್ನು ಮಟ್ಟಹಾಕುವ ನಿಟ್ಟಿನಲ್ಲಿ ಕೆ-ಕೋಕಾ ಕಾಯ್ದೆಯು ಅತ್ಯಂತ ಪ್ರಬಲವಾಗಿದ್ದು, ಇಂತಹ ಅಪರಾಧ ಸಂಘಟನೆಗಳೊಂದಿಗೆ ಗುರುತಿಸಿಕೊಳ್ಳುವುದು ಅಥವಾ ಸಹಕರಿಸುವುದು ಕೂಡ ಶಿಕ್ಷಾರ್ಹ ಅಪರಾಧವಾಗಿದೆ. ಈ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಪ್ರತಿಯೊಬ್ಬ ಆರೋಪಿಯ ಪಾತ್ರಕ್ಕೆ ಅನುಗುಣವಾಗಿ ಅತ್ಯಂತ ಕಠಿಣವಾದ ಸೆಕ್ಷನ್ಗಳನ್ನು ಹಾಕಲಾಗುವುದು ಮತ್ತು ಸಂಘಟಿತ ಅಪರಾಧಕ್ಕೆ ಅನ್ವಯವಾಗುವಂತೆ ಜೈಲು ಶಿಕ್ಷೆ ಖಾತರಿಪಡಿಸಲಾಗುವುದು ಎಂದು ಪೊಲೀಸ್ ಆಯುಕ್ತರು ಎಚ್ಚರಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









