ಮಂಗಳೂರು : ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಒಂದು ವರ್ಷದಿಂದ ಕಾನೂನು ಮತ್ತು ಸುವ್ಯವಸ್ಥೆ ಅತ್ಯಂತ ಆಶಾದಾಯಕವಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ. ಎಂ.ಎ. ಸಲೀಂ ಶ್ಲಾಘಿಸಿದ್ದಾರೆ. ಮಂಗಳವಾರ ಮಂಗಳೂರಿಗೆ ಭೇಟಿ ನೀಡಿದ ಅವರು, ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ನಗರದಲ್ಲಿ ಸದ್ಯ ನೆಲೆಸಿರುವ ಶಾಂತಿಯುತ ವಾತಾವರಣವನ್ನು ಇದೇ ರೀತಿ ಮುಂದುವರಿಸಿಕೊಂಡು ಹೋಗುವಂತೆ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ ವಿಚಾರವಾಗಿಯೂ ಚರ್ಚೆ ನಡೆಸಿದ ಅವರು, ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬದವರು ಸಲ್ಲಿಸಿರುವ ವರ್ಗಾವಣೆ ಮನವಿಗಳ ಬಗ್ಗೆ ಸಭೆಯಲ್ಲಿ ಪರಾಮರ್ಶೆ ನಡೆಸಲಾಗಿದೆ ಎಂದು ತಿಳಿಸಿದರು. ಸಿಬ್ಬಂದಿಗಳ ಬೇಡಿಕೆಗೆ ಸ್ಪಂದಿಸಿ, ಹಂತ ಹಂತವಾಗಿ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳಲು ಕ್ರಮ ವಹಿಸಲಾಗುವುದು ಎಂಬ ಭರವಸೆಯನ್ನು ಡಾ. ಎಂ.ಎ. ಸಲೀಂ ನೀಡಿದ್ದಾರೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಜಿಪಿ ಅವರು ಇಲಾಖೆಯ ಆಡಳಿತಾತ್ಮಕ ವಿಷಯಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ಆದರೆ, ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ವಿರುದ್ಧ ಜಾರಿ ನಿರ್ದೇಶನಾಲಯದ ಎಸ್ಪಿಯೊಬ್ಬರು ನೀಡಿದ್ದಾರೆ ಎನ್ನಲಾದ ದೂರಿನ ಕುರಿತು ಕೇಳಲಾದ ಪ್ರಶ್ನೆಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









