ಮಂಗಳೂರು : ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಮತ್ತು ಕಲಬುರಗಿ ಜಿಲ್ಲೆಗಳ ಸಾಧನೆಯನ್ನು ಮುಂದಿಟ್ಟುಕೊಂಡು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದಿದ್ದರೆ, ಸಚಿವರ ಸ್ವಂತ ಜಿಲ್ಲೆಯಾದ ಕಲಬುರಗಿ ಕೊನೆಯ ಸ್ಥಾನಕ್ಕೆ ಕುಸಿದಿರುವುದನ್ನು ಶಾಸಕರು ಲೇವಡಿ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯನ್ನು ಸದಾ ಟೀಕಿಸುವ ಪ್ರಿಯಾಂಕ್ ಖರ್ಗೆ ಅವರು, ಮೊದಲು ತಮ್ಮ ಜಿಲ್ಲೆಯ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವತ್ತ ಗಮನಹರಿಸಲಿ ಎಂದು ಭರತ್ ಶೆಟ್ಟಿ ಕಿವಿಮಾತು ಹೇಳಿದ್ದಾರೆ. ಕೇವಲ ಟೀಕೆ ಮಾಡುವುದರಲ್ಲಿ ಕಾಲ ಕಳೆಯುವ ಬದಲು, ತಮ್ಮ ಜಿಲ್ಲೆಯಲ್ಲಿಯೇ ಉಳಿದುಕೊಂಡು ಅಲ್ಲಿನ ಶೈಕ್ಷಣಿಕ ಗುಣಮಟ್ಟವನ್ನು ಮೇಲಕ್ಕೆತ್ತಲು ಶ್ರಮಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯು ಆರೋಗ್ಯ, ಶಿಕ್ಷಣ ಹಾಗೂ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ. ಆದರೆ ಕಲಬುರಗಿ ಜಿಲ್ಲೆಯು ಈ ಎಲ್ಲಾ ರಂಗಗಳಲ್ಲಿ ಇನ್ನೂ ಹಿಂದುಳಿದಿದೆ. ಐಟಿ ಸಚಿವರಾಗಿ ಅಧಿಕಾರ ಅನುಭವಿಸುತ್ತಿರುವ ನೀವು ನಿಮ್ಮ ಜಿಲ್ಲೆಯ ಅಭಿವೃದ್ಧಿಗೆ ನೀಡಿದ ಕೊಡುಗೆಯಾದರೂ ಏನು? ಎಂದು ಶಾಸಕರು ಪ್ರಶ್ನಿಸಿದ್ದಾರೆ.
ಸಚಿವರು ಇತರ ಜಿಲ್ಲೆಗಳ ಬಗ್ಗೆ ಮಾತನಾಡುವುದನ್ನು ಬಿಟ್ಟು, ಅಭಿವೃದ್ಧಿ ಕಾರ್ಯಗಳ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲಿ. ಕಲಬುರಗಿಯನ್ನು ಶೈಕ್ಷಣಿಕವಾಗಿ ಮತ್ತು ತಾಂತ್ರಿಕವಾಗಿ ಮುನ್ನಡೆಸುವ ಹೊಣೆಗಾರಿಕೆ ಅವರ ಮೇಲಿದೆ ಎಂದು ಭರತ್ ಶೆಟ್ಟಿ ಅವರು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









