ಉಪ್ಪಿನಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಗೋಳಿತ್ತೊಟ್ಟು ಜಂಕ್ಷನ್ನಲ್ಲಿ ಮೇ 10ರ ಭಾನುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ನಿವಾಸಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಯೋಗಿ ಸದಾನಂದ ಆಚಾರ್ಯ (59) ಎಂದು ಗುರುತಿಸಲಾಗಿದೆ. ಅವರ ಪತ್ನಿ ಉಷಾ ಅವರು ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಂಪತಿಗಳು ಅರಸಿನಮಕ್ಕಿಯಿಂದ ಕೊಕ್ಕಡ ಮಾರ್ಗವಾಗಿ ಉಪ್ಪಿನಂಗಡಿಗೆ ತಮ್ಮ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದರು. ಗೋಳಿತ್ತೊಟ್ಟು ಜಂಕ್ಷನ್ ತಲುಪಿ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಸಂದರ್ಭದಲ್ಲಿ, ಉಪ್ಪಿನಂಗಡಿಯಿಂದ ಶಿರಾಡಿ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಕಾರು ಇವರ ಬೈಕ್ಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸದಾನಂದ ಆಚಾರ್ಯ ಅವರು ಗಂಭೀರ ಸ್ವರೂಪದ ಗಾಯಗಳಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಸಂಬಂಧಿಸಿದಂತೆ ಮಹಜರು ಪ್ರಕ್ರಿಯೆ ಪೂರೈಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಸದಾನಂದ ಆಚಾರ್ಯ ಅವರ ನಿಧನಕ್ಕೆ ಅರಸಿನಮಕ್ಕಿ ಹಾಗೂ ಹತ್ಯಡ್ಕ ಪರಿಸರದಲ್ಲಿ ತೀವ್ರ ಶೋಕ ವ್ಯಕ್ತವಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









