ಉಜಿರೆ : ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ತಮ್ಮ ಕುಟುಂಬ ಸಮೇತರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪವಿತ್ರ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ದೇವಸ್ಥಾನಕ್ಕೆ ಆಗಮಿಸಿದ ಅವರು ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಹಾಗೂ ವಿವಿಧ ಸೇವೆಗಳನ್ನು ಸಲ್ಲಿಸಿ ಭಕ್ತಿ ಸಮರ್ಪಿಸಿದರು. ಪಕ್ಷದ ಜವಾಬ್ದಾರಿಗಳ ನಡುವೆ ಕುಟುಂಬದೊಂದಿಗೆ ಆಗಮಿಸಿದ್ದ ಅವರು ಕ್ಷೇತ್ರದ ಪಾವಿತ್ರ್ಯತೆಯನ್ನು ಕೊಂಡಾಡಿದರು.
ದರ್ಶನದ ನಂತರ ವಿಜಯೇಂದ್ರ ಅವರು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಹೆಗ್ಗಡೆ ದಂಪತಿಗಳ ಆಶೀರ್ವಾದ ಪಡೆದ ಅವರು, ಕ್ಷೇತ್ರದ ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಗಳ ಕುರಿತು ಮಾತುಕತೆ ನಡೆಸಿದರು. ರಾಜ್ಯಾಧ್ಯಕ್ಷರ ಈ ಭೇಟಿಯು ಪಕ್ಷದ ಕಾರ್ಯಕರ್ತರಲ್ಲಿಯೂ ಹೊಸ ಉತ್ಸಾಹ ತುಂಬಿದೆ.
ಈ ಭೇಟಿಯ ಸಂದರ್ಭದಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಹಾಗೂ ವಿಧಾನಪರಿಷತ್ ಸದಸ್ಯರಾದ ಪ್ರತಾಪ್ಸಿಂಹ ನಾಯಕ್ ಸೇರಿದಂತೆ ಹಲವು ಪ್ರಮುಖ ಬಿಜೆಪಿ ನಾಯಕರು ವಿಜಯೇಂದ್ರ ಅವರಿಗೆ ಸಾಥ್ ನೀಡಿದರು. ಸ್ಥಳೀಯ ಮುಖಂಡರು ಮತ್ತು ಗಣ್ಯರು ಈ ಧಾರ್ಮಿಕ ಭೇಟಿಯಲ್ಲಿ ಪಾಲ್ಗೊಂಡು ರಾಜ್ಯಾಧ್ಯಕ್ಷರನ್ನು ಗೌರವಿಸಿದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









