ಮಂಗಳೂರು: ಮಾದಕ ವಸ್ತುಗಳ ಮಾರಾಟ ಜಾಲದ ವಿರುದ್ಧ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಭಾರೀ ಪ್ರಮಾಣದ ಹೈಡ್ರೋವಿಡ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದ್ದು, ಓರ್ವ ವಿದ್ಯಾರ್ಥಿನಿಯನ್ನು ಬಂಧಿಸಲಾಗಿದೆ. ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ನಿವಾಸಿಯಾದ ಸುಹಾನಾ (21) ಬಂಧಿತ ಆರೋಪಿ. ಈಕೆ ಕುಂದಾಪುರದ ಖಾಸಗಿ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದು, ವಿದ್ಯಾಭ್ಯಾಸದ ನಡುವೆ ಮಾದಕ ದ್ರವ್ಯ ಜಾಲದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.
ಖಚಿತ ಮಾಹಿತಿಯ ಮೇರೆಗೆ ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಪೊಲೀಸರು ಜಂಟಿಯಾಗಿ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿತೆಯಿಂದ ಸುಮಾರು 35 ಲಕ್ಷ ರೂಪಾಯಿ ಮೌಲ್ಯದ 1.42 ಕೆಜಿ ಹೈಡ್ರೋವಿಡ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇದರೊಂದಿಗೆ ಆಕೆಯ ಬಳಿಯಿದ್ದ ಮೊಬೈಲ್ ಫೋನ್ ಹಾಗೂ ಇತರ ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಕೆ ತಮಿಳುನಾಡಿನ ಚೆನ್ನೈನಿಂದ ಗಾಂಜಾವನ್ನು ತಂದು ಮಂಗಳೂರಿನಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದಳು ಎಂಬ ಮಾಹಿತಿ ಲಭ್ಯವಾಗಿದೆ.
ಬಂಧಿತ ಸುಹಾನಾ ಈ ಹಿಂದೆಯೂ ಇಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಆಕೆಯ ವಿರುದ್ಧ ಈಗಾಗಲೇ ಮಂಗಳೂರಿನ ಕಾವೂರು ಪೊಲೀಸ್ ಠಾಣೆ ಹಾಗೂ ಬೆಂಗಳೂರು ಏರ್ಪೋರ್ಟ್ ಕಸ್ಟಮ್ಸ್ನಲ್ಲಿ ಪ್ರಕರಣಗಳು ದಾಖಲಾಗಿವೆ. ಪ್ರಸ್ತುತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ (NDPS) ಕಾಯ್ದೆಯಡಿ ಮೊಕದ್ದಮೆ ಹೂಡಲಾಗಿದ್ದು, ಜಾಲದ ಹಿಂದಿರುವ ಇತರ ವ್ಯಕ್ತಿಗಳ ಪತ್ತೆಗೆ ತನಿಖೆ ಮುಂದುವರಿದಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









