ನವದೆಹಲಿ : ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಬಲ್ಲ ಪ್ರಮುಖ ಬೆಳವಣಿಗೆಯೊಂದರಲ್ಲಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಧುರೀಣ ಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಅಧ್ಯಕ್ಷರು ಈ ಮಹತ್ವದ ನಿರ್ಧಾರಕ್ಕೆ ಅಂಕಿತ ಹಾಕಿದ್ದಾರೆ ಎಂದು ಎಐಸಿಸಿ ಬಿಡುಗಡೆ ಮಾಡಿರುವ ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದೇ ವೇಳೆ, ಈವರೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ನಿಷ್ಠೆಯಿಂದ ಸೇವೆ ಸಲ್ಲಿಸಿರುವ ನಾಯಕ ಡಿ.ಕೆ. ಶಿವಕುಮಾರ್ ಅವರ ಸುದೀರ್ಘ ಕೊಡುಗೆಗಳನ್ನು ಕಾಂಗ್ರೆಸ್ ಪಕ್ಷವು ಮುಕ್ತ ಕಂಠದಿಂದ ಶ್ಲಾಘಿಸಿದೆ. ಪಕ್ಷದ ಸಂಘಟನೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ತೋರಿದ ಶ್ರಮ ಮತ್ತು ಅವರು ನೀಡಿದ ಅತ್ಯಮೂಲ್ಯ ಕೊಡುಗೆಗಳನ್ನು ಪಕ್ಷವು ಅತ್ಯಂತ ಗೌರವದಿಂದ ಸ್ಮರಿಸುತ್ತದೆ ಎಂದು ಎಐಸಿಸಿ ಹೈಕಮಾಂಡ್ ಪ್ರಶಂಸಿಸಿದೆ.
ಈ ಮಹತ್ವದ ಸಾಂಸ್ಥಿಕ ಬದಲಾವಣೆಯ ಆದೇಶವನ್ನು ನವದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಪಕ್ಷದ ಕೇಂದ್ರ ಕಚೇರಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಜೂನ್ 3, 2026 ರಂದು ಅಧಿಕೃತವಾಗಿ ಹೊರಡಿಸಿದ್ದಾರೆ. ಮುಂಬರುವ ದಿನಗಳಲ್ಲಿ ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವದಲ್ಲಿ ರಾಜ್ಯ ಕಾಂಗ್ರೆಸ್ ತನ್ನ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆ ಹೊಂದಿದೆ.
ಅಭಿನಂದನೆ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಹಿರಿಯ ನಾಯಕರಾದ ಶ್ರೀ B K Hariprasad ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.
ದಶಕಗಳ ನಿಮ್ಮ ರಾಜಕೀಯ ಅನುಭವ, ಸೈದ್ಧಾಂತಿಕ ಬದ್ಧತೆ ಹಾಗೂ ಪಕ್ಷದ ಮೇಲಿರುವ ನಿಷ್ಠೆ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಪಕ್ಷವನ್ನು ಇನ್ನಷ್ಟು ಬಲಿಷ್ಠವಾಗಿ ಸಂಘಟಿಸಲು ಮತ್ತು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸಲು ಶಕ್ತಿಯಾಗಲಿ ಎಂದು ಮನಃಪೂರ್ವಕವಾಗಿ ಹಾರೈಸುತ್ತೇನೆ.
ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಇಲ್ಲಿಯವರೆಗೆ ಸಮರ್ಥ ನಾಯಕತ್ವ ನೀಡಿ, ಪಕ್ಷವನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸಿದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರ ಪರಿಶ್ರಮ ಪ್ರಶಂಸನೀಯ. ಅವರಿಗೂ ನನ್ನ ಅಭಿನಂದನೆಗಳು.
- ಲಕ್ಷ್ಮೀ ಹೆಬ್ಬಾಳಕರ್
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಸುದ್ದಿಗಳು, ಟಾಪ್ ಸುದ್ದಿ, ರಾಜಕೀಯ, ರಾಜ್ಯ ಸುದ್ದಿಗಳು









